News

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲುತ್ತದೆ – ಭವಿಷ್ಯ ನುಡಿದ ಸೋನಿಯಾ ಗಾಂಧಿ

ಹೊಸದಿಲ್ಲಿ, ಫೆ 9: ವಿಧಾನಸಭೆ ಚುನಾವಣೆಗೆ ಕರ್ನಾಟಕದಲ್ಲಿ ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಾಗಿ ನಾವು ರಣತಂತ್ರ ಮಾಡಬೇಕು ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಜನತೆಗೆ ಕರೆ ನೀಡಿದ್ದಾರೆ.


ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಕಾಂಗ್ರೆಸ್‌ ಈಗ ಮತ್ತೆ ಗೆಲುವಿನ ದಾರಿಗೆ ಬಂದಿದೆ. ನಮ್ಮ ಪಕ್ಷ ಗುಜರಾತ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ರಾಜಸ್ಥಾನದಲ್ಲಿ ನಡೆದ ಮರು ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಕಂಡಿದೆ. ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಮಾನ ಮನಸ್ಕ ಪಕ್ಷಗಳ ಜತೆ ಕೈ ಜೋಡಿಸಿ ಬಿಜೆಪಿಯನ್ನು ಎದುರಿಸಬೇಕಾಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲುವುದು ಖಚಿತ ಎಂದು ಸೋನಿಯಾ ಗಾಂಧಿ ಹೇಳಿದರು

 ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ  ಕೋಮು ಗಲಭೆ ಮೂಲಕ ಲಾಭ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಅದಕ್ಕೆ ನಾವು ಅವಕಾಶ ಕೊಡಬಾರದು. ಎಲ್ಲರೂ ಸಾಂಘಿಕ ಹೋರಾಟದಿಂದ ಶ್ರಮವಹಿಸಿದರೆ ಗೆಲವು ಕೈವಶವಾಗಲಿದೆ. ರಾಹುಲ್‌ ಗಾಂಧಿ ನೇತೃತ್ವದಲ್ಲಿ ಪಕ್ಷವನ್ನು ಮುನ್ನಡೆಸಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.